Wednesday, June 3, 2009

ಅಂಗನವಾಡಿ ಆಹಾರ ಪೂರೈಕೆ ತನಿಖೆಗೆ 5 ತಂಡ: ಜಿಲ್ಲಾಧಿಕಾರಿ

ಮಂಗಳೂರು, ಜೂ. 3: ಅಂಗನವಾಡಿ ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ ಕಳಪೆಯಾಗಿದೆ ಎಂಬ ದೂರಿಗೆ ತತ್ ಕ್ಷಣವೇ ಸ್ಪಂದಿಸಿರುವ ಜಿಲ್ಲಾಡಳಿತ ಈ ಸಂಬಂಧ ತನಿಖೆಗೆ 5 ತಂಡಗಳನ್ನು ರಚಿಸಿದ್ದು, ಪ್ರಾಥಮಿಕ ವರದಿ ಲಭ್ಯವಾಗಿದೆ; ಮುಂದಿನ ಹಂತದ ತನಿಖೆಯ ಬಳಿಕ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಶ್ರೀ ವಿ. ಪೊನ್ನುರಾಜ್ ತಿಳಿಸಿದ್ದಾರೆ.
ಇಂದು ಜಿಲ್ಲಾಧಿಕಾರಿಗಳ ಕೋರ್ಟ್ ಹಾಲ್ ನಲ್ಲಿ ಈ ಸಂಬಂಧ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅವರು, ಮಂಗಳೂರು ಗ್ರಾಮಾಂತರಕ್ಕೆ ಸಂಬಂಧಿಸಿದ ಅಂಗನವಾಡಿ ಕೇಂದ್ರಗಳಲ್ಲಿ ಪರಿಶೀಲನೆ ನಡೆಸಲು 5 ತಂಡಗಳನ್ನು ರಚಿಸಿದ್ದು, 14 ಅಂಗನವಾಡಿಗಳಿಗೆ ಭೇಟಿ ನೀಡಿ ಪರಿಶೀಲಿಸಿ ವರದಿ ತರಿಸಲಾಗಿದೆ ಎಂದರು. ಜಿಲ್ಲೆಯಲ್ಲಿ ಒಟ್ಟು 1,22,661 ಫಲಾನುಭವಿಗಳಿದ್ದು, ಜಿಲ್ಲೆಯಲ್ಲಿ ಒಟ್ಟು 144 ಮಕ್ಕಳು ಪೌಷ್ಠಿಕಾಂಶ ಕೊರತೆಯಿಂದ ಬಳಲುತ್ತಿದ್ದಾರೆ. ಈ ಬಗ್ಗೆ ಇಲಾಖೆ ಅಗತ್ಯ ಕ್ರಮಗಳನ್ನು ಕೈಗೊಂಡು ಇಂತಹ ಮಕ್ಕಳ ಬಗ್ಗೆ ಕಾಳಜಿ ವಹಿಸಿದೆ. ಹಾಗಾಗಿ ಜಿಲ್ಲೆಯಲ್ಲಿ ಆರೋಗ್ಯ ಪರಿಸ್ಥಿತಿ ಉತ್ತಮ ಎಂದು ಹೇಳಬಹುದಾಗಿದ್ದು, ದಾಸ್ತಾನು ಕಟ್ಟಡಗಳ ಸೋರಿಕೆಯಿಂದಲೂ ಅಕ್ಕಿ ಹಾಳಾಗಿದೆ. ಈ ಎಲ್ಲಾ ಸ್ಥಳಗಳಿಗೆ ಭೇಟಿ ಕೊಟ್ಟು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.