Friday, June 5, 2009

ಪರಿಸರ ಸ್ನೇಹಿ ಯೋಜನೆಗಳಿಂದ ಅಭಿವೃದ್ಧಿಮಂತ್ರ


ಮಂಗಳೂರು, ಜೂ. 5: ರಾಜ್ಯದ ಅಭಿವೃದ್ಧಿಗೆ ಅತ್ಯಗತ್ಯವಾಗಿರುವ ವಿದ್ಯುತ್ ಕೊರತೆ ನೀಗಿಸಲು ತದಡಿಯಂತಹ ಉಷ್ಣ ವಿದ್ಯುತ್ ಸ್ಥಾವರಗಳ ನಿರ್ಮಾಣ ಅಗತ್ಯ; ಇಂತಹ ಯೋಜನೆಗಳಿಂದ ಪರಿಸರಕ್ಕೆ ಹಾನಿ ಎಂಬ ವರದಿಗಳು ಬರುತ್ತಿದ್ದರೂ ವೈಜ್ಞಾನಿಕವಾಗಿ ಸಾಬೀತಾಗಿಲ್ಲದ ಕಾರಣ ಸ್ಥಾವರ ಸ್ಥಾಪನೆ ಸಂದರ್ಭದಲ್ಲಿ ಪರಿಸರ ಸ್ನೇಹಿ ಹಾಗೂ ಮಾಲಿನ್ಯಕ್ಕೆ ಅವಕಾಶ ನೀಡದಂತೆ ಕಟ್ಟೆಚ್ಚರ ವಹಿಸಲಾಗುವುದು ಎಂದು ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶ್ರೀ ಕೃಷ್ಣ ಜೆ ಪಾಲೆಮಾರ್ ಹೇಳಿದರು.

ವಿಶ್ವ ಪರಿಸರ ದಿನಾಚರಣೆ -2009ರ ಅಂಗವಾಗಿ ನಗರದ ಸರ್ಕ್ಯುಟ್ ಹೌಸ್ ನಲ್ಲಿ ಆಯೋಜಿಸಲಾದ ಸಸಿ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಿದ್ದರು. ಜಿಲ್ಲೆಯಲ್ಲಿ ಪರಿಸರಕ್ಕೆ ಮಾರಕವಾಗುವ ಯಾವುದೇ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ ಅವರು, ಇಂದು ನಮ್ಮ ಪರಿಸರಕ್ಕೆ ಅತಿ ಹೆಚ್ಚು ಹಾನಿ ಪ್ಲಾಸ್ಟಿಕ್ ಬಳಕೆಯಿಂದ ಆಗುತ್ತಿದ್ದು, ಈ ಬಗ್ಗೆ ಬಳಕೆದಾರರಲ್ಲಿ ಜಾಗ್ರತಿಯನ್ನು ಮೂಡಿಸುವುದು ಹಾಗೂ ಪ್ಲಾಸ್ಟಿಕ್ ನಿಷೇಧಕ್ಕೆ ಕ್ರಮಕೈಗೊಳ್ಳುವ ನಿಟ್ಟಿನಲ್ಲಿ ಚಿಂತಿಸಲಾಗುವುದು ಎಂದು ಅವರು ನುಡಿದರು.

ಕಾರ್ಯಕ್ರಮವನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಅರಣ್ಯ ಇಲಾಖೆ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದ್ದು, ಉಪ ಅರಣ್ಯ ಸಂರಕ್ಷಣಾಧಿಕಾರಿ ವಿಜಯ ಕುಮಾರ್, ಎಸಿಎಫ್ ರವಿರಾಜ್ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.