Thursday, June 25, 2009

ಜಿಲ್ಲೆಯ ಕಾನೂನು ಸುವ್ಯವಸ್ಥೆ ಉತ್ತಮ: ಡಾ. ಎಸ್ ಆರ್ ನಾಯಕ್



ಮಂಗಳೂರು, ಜೂ.25: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು, ಜಿಲ್ಲೆಯ ಪೊಲೀಸರು ಮಾನವ ಹಕ್ಕುಗಳ ಬಗ್ಗೆ ಜಾಗೃತರಾಗಿದ್ದಾರೆ ಎಂದು ರಾಜ್ಯ ಮಾನವ ಹಕ್ಕು ಆಯೋಗದ ಅಧ್ಯಕ್ಷ ಡಾ. ಎಸ್ .ಆರ್. ನಾಯಕ್ ಅವರು ಹೇಳಿದರು.

ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಜಿಲ್ಲಾಧಿಕಾರಿಗಳ ಕರ್ತವ್ಯಪರತೆಯನ್ನು ಶ್ಲಾಘಿಸಿದರಲ್ಲದೆ, ಇದಕ್ಕೆ ಪೂರಕವಾಗಿ ಆಡಳಿತಾತ್ಮಕ ಸಹಕಾರ ನೀಡುತ್ತಿರುವ ಅಧಿಕಾರಿಗಳ ಬಗ್ಗೆಯೂ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.

ನಮ್ಮ ಜಾತ್ಯಾತೀತ ವ್ಯವಸ್ಥೆಯಲ್ಲಿ ಸಂವಿಧಾನಕ್ಕೆ ನೀಡುವಷ್ಟೇ ಗೌರವವನ್ನು ಮಾನವ ಹಕ್ಕುಗಳಿಗೂ ನೀಡಬೇಕಿದ್ದು, ಮಾನವ ಹಕ್ಕುಗಳ ರಕ್ಷಣೆಯ ಬಗ್ಗೆ ಪ್ರತಿಯೊಬ್ಬ ಅಧಿಕಾರಿಯೂ ತಿಳಿದಿರಬೇಕಾದ ಅಗತ್ಯವನ್ನು ಒತ್ತಿಹೇಳಿದರು. ಜನಪರ ಯೋಜನೆಗಳ ಫಲಗಳನ್ನು ಫಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕೆಂದು ನುಡಿದ ಅವರು, ಪ್ರಜೆಗಳ ಸಾಂವಿಧಾನಿಕ ಹಕ್ಕುಗಳಿಗೆ ಚ್ಯುತಿ ಬಾರದಂತೆ ನಡೆದು ನೆರವಾದರೆ ಎಲ್ಲರಿಗೂ ಕ್ಷೇಮ ಎಂದು ಹೇಳಿದರು.

ವಿಧವಾ ವೇತನ, ಮಾಸಾಶನದಂತಹ ಸೌಲಭ್ಯ ವಿತರಣೆಯಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿ ಕರ್ತವ್ಯ ನಿಷ್ಠೆ ಮೆರೆಯಲು ಸಲಹೆ ಮಾಡಿದ ಅವರು, ದಕ್ಷಿಣ ಕನ್ನಡ ಜಿಲ್ಲೆ ಮಾನವ ಹಕ್ಕುಗಳ ರಕ್ಷಣೆಯಲ್ಲಿ ಇತರ ಜಿಲ್ಲೆಗಳಿಗೆ ಮಾದರಿಯಾಗಲಿ ಎಂದು ಶುಭ ಹಾರೈಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಶ್ರೀ ವಿ. ಪೊನ್ನುರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಬ್ರಮಣ್ಯೇಶ್ವರ ರಾವ್ ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.