Monday, July 11, 2011

ದಾಸ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ:ಡಾ.ಎನ್.ಎಸ್.ಚನ್ನಪ್ಪ ಗೌಡ

ಮಂಗಳೂರು,ಜುಲೈ.11:ಪ್ರಥಮ ಬಾರಿಗೆ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇವರ ವತಿಯಿಂದ ಮಂಗಳೂರು ಪುರಭವನದಲ್ಲಿ ಜುಲೈ 14 ಹಾಗೂ 15 ರಂದು ಎರಡು ದಿನಗಳ ರಾಜ್ಯ ಮಟ್ಟದ ದಾಸ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆಯೆಂದು ದ.ಕ.ಜಿಲ್ಲಾಧಿಕಾರಿ ಡಾ.ಎನ್.ಎಸ್.ಚನ್ನಪ್ಪಗೌಡ ಇವರು ತಿಳಿಸಿದ್ದಾರೆ. ಅವರು ದಿನಾಂಕ ಜುಲೈ 8ರ ಶುಕ್ರವಾರದಂದು ತಮ್ಮ ಕಚೇರಿಯಲ್ಲಿ ಈ ಬಗ್ಗೆ ನಡೆದ ಪೂರ್ವಭಾವೀ ಸಿದ್ಧತೆಗಳ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ಬರುವ ಅತಿಥಿ ಅಭ್ಯಾಗತರಿಗೆ ಜಿಲ್ಲೆಯ ಶರವು.ಕಟೀಲು,ಕುಕ್ಕೆ ಸುಬ್ರಹ್ಮಣ್ಯ ದೇವಾಲಯಗಳು ಊಟೋಪಚಾರಕ್ಕೆ ನೆರವು ನೀಡಲಿವೆ. ದ.ಕ.ಜಿಲ್ಲಾ ವ್ಯಾಪ್ತಿಯಲ್ಲಿ ಶಿಕ್ಷಣ ಇಲಾಖೆ ಶಿಕ್ಷಕರು ಈ ಸಮ್ಮೇಳನದಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ಅವರಿಗೆ ಜುಲೈ 14 ಮತ್ತು 15 ರಂದು ಅನ್ಯ ಕರ್ತವ್ಯದ ಮೇರೆಗೆ ಎಂಬುದಾಗಿ ಪರಿಗಣಿಸಲು ಕ್ರಮ ಕೈಗೊಳ್ಳಲಾಗುವುದೆಂದು ತಿಳಿಸಿದರು. ರಾಜ್ಯಾದ್ಯಂತ ಬರುವ ಅತಿಥಿಗಳಿಗೆ ವಸತಿ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲಾಗಿದೆ.ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ.ಪ್ರಭಾಕರ ಶರ್ಮಾ,ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಪ್ರದೀಪ್ ಕುಮಾರ್ ಕಲ್ಕೂರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶಿವರಾಮೇ ಗೌಡ ಮುಂತಾದವರು ಭಾಗವಹಿಸಿದ್ದರು.