Tuesday, October 11, 2011

ವಿದ್ಯುತ್ ಕೊರತೆ ನೀಗಿಸಲು ಕೇಂದ್ರಕ್ಕೆ ನಿಯೋಗ: ಮುಖ್ಯಮಂತ್ರಿಗಳು

ಮಂಗಳೂರು,ಅಕ್ಟೋಬರ್.11:ಪ್ರಸ್ತುತ ಸನ್ನಿವೇಶದಲ್ಲಿ ಕರ್ನಾಟಕ ರಾಜ್ಯ ಎದುರಿಸುತ್ತಿರುವ ವಿದ್ಯುತ್ ಕೊರತೆಯನ್ನು ನೀಗಿಸಲು ಬೇಕಾದ ತುರ್ತು ಕ್ರಮಗಳನ್ನು ಸರ್ಕಾರ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳಾದ ಡಿ.ವಿ.ಸದಾನಂದ ಗೌಡರು ಹೇಳಿದ್ದಾರೆ.ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ತನ್ನ ಹುಟ್ಟೂರು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಗೆ ಆಗಮಿಸಿದ ಸಂದರ್ಭದಲ್ಲಿ ಇಲ್ಲಿನ ಕಾವು ಮಣಿಯಡ್ಕ ಮೈದಾನ ಹೆಲಿಪ್ಯಾಡ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ರಾಜ್ಯಕ್ಕೆ ಹೆಚ್ಚುವರಿ ವಿದ್ಯುತ್ ನೀಡುವಂತೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ.ಈ ಹಿನ್ನೆಲೆಯಲ್ಲಿ ಅಕ್ಟೋಬರ್ 14 ರಂದು ಉನ್ನತ ಮಟ್ಟದ ನಿಯೋಗ ದೆಹಲಿಗೆ ತೆರಳಲಿದೆ ಎಂದರು.ರಾಜ್ಯದಲ್ಲಿನ ನಕ್ಸಲ್ ಧಮನಕ್ಕೆ ಸರ್ಕಾರ ಕ್ರಮಕೈಗೊಳ್ಳಲಿದೆ. ಜಿಲ್ಲೆಯಲ್ಲಿನ ಅಡಿಕೆಗೆ ಕೊಳೆರೋಗದಿಂದ ಆದ ನಷ್ಟದ ಬಗ್ಗೆ ಸರ್ವೆ ಮಾಡಿ ವರದಿ ತರಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.ಹೆಲಿಪ್ಯಾಡಿಗೆ ಬಂದಿಳಿದ ಮುಖ್ಯಮಂತ್ರಿಗಳನ್ನು ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಎನ್.ಎಸ್.ಚನ್ನಪ್ಪ ಗೌಡ, ಸಿಇಓ ಡಾ.ವಿಜಯ ಪ್ರಕಾಶ್,ಸಂಸದ ನಳಿನ್ ಕುಮಾರ್ ಕಟೀಲ್, ಪಕ್ಷದ ಮುಖಂಡರುಗಳು, ಸ್ಥಳಿಯ ಜನಪ್ರತಿನಿಧಿಗಳು ಸ್ವಾಗತಿಸಿದರು.