ಮಂಗಳೂರು, ಜೂ. 22: ಮಳೆಗಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆಗಳಲ್ಲಿ ಸಾಂಕ್ರಾಮಿಕ ರೋಗ ಭೀತಿ ಉಂಟಾಗಿದ್ದು, ರೋಗ ತಡೆ ಮತ್ತು ಮುನ್ನೆಚ್ಚರಿಕೆಗೆ ಕ್ಷಿಪ್ರ ಕಾರ್ಯಪಡೆಯನ್ನು ರಚಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಪಿ. ಶಿವಶಂಕರ್ ತಿಳಿಸಿದರು.
ಈ ಸಂಬಂಧ ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾದ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ಪರಿಸ್ಥಿತಿ ನಿಯಂತ್ರಣಕ್ಕೆ ಮತ್ತು ಜನರಲ್ಲಿ ಆತ್ಮವಿಶ್ವಾಸ ತುಂಬಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ತುರ್ತು ಕ್ರಮಕೈಗೊಳ್ಳಲು ಪೂರಕವಾಗಿ ಗ್ರಾಮೀಣ ಮಟ್ಟದಲ್ಲಿ 368 ಗ್ರಾಮ ಆರೋಗ್ಯ ಮತ್ತು ನೈರ್ಮಲ್ಯ ಸಮಿತಿಗಳಿಗೆ 10,000 ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ 25,000 ರೂ., ಮುಕ್ತನಿಧಿ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಿಗೆ 50,000 ರೂ. ಮುಕ್ತ ನಿಧಿಯನ್ನು ಬಿಡುಗಡೆ ಮಾಡಲಾಗಿದ್ದು, ಈ ಹಣವನ್ನು ಸಮೀಕ್ಷೆಗೆ ಮತ್ತು ಅತೀ ತುರ್ತು ಸೇವೆಗೆ ಬಳಸಲು ಸೂಚಿಸಲಾಗಿದೆ. ಸಾಂಕ್ರಾಮಿಕ ರೋಗ ತಡೆಗೆ ಪೀಡಿತ ಪ್ರದೇಶಗಳೆಂದು ಗುರುತಿಸಲಾದ ಪ್ರತಿ ಮನೆಯೊಳಗೆ ಸ್ಪ್ರೆ ಮತ್ತು ಮನೆಯ ಹೊರಗೆ ಫಾಗಿಂಗ್ ನಡೆಸಲು ಸೂಚಿಸಲಾಗಿದೆ. ಮನಾಪ ವ್ಯಾಪ್ತಿಯಲ್ಲಿ 50 ತಂಡ ಗಳನ್ನು ರಚಿಸಲಾಗಿದ್ದು, ಸಾಂಕ್ರಾಮಿಕ ರೋಗ ತಡೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.