ಮಂಗಳೂರು, ಜು.21: ಪರಿಸರ ಮತ್ತು ಸ್ವಚ್ಛತೆಯ ಬಗ್ಗೆ ಪ್ರತಿಯೊಬ್ಬರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಸದಸ್ಯರಾದ ಕು.ಭಾಗೀರಥಿ ಹೇಳಿದರು.
ಸೋಮವಾರ ಸುಳ್ಯದ ಐವರ್ನಾಡಿನ ಪ್ರಾಥಮಿಕ ಕೃಷಿ ಸಹಕಾರಿ ಬ್ಯಾಂಕಿನ ಸಭಾಂಗಣದಲ್ಲಿ ವಾರ್ತಾ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಸಾಂಕ್ರಾಮಿಕ ರೋಗ ಮತ್ತು ಸ್ವಚ್ಛತೆ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು. ಪರಿಸರ ಮಾಲಿನ್ಯದಿಂದ ಪ್ರಸಕ್ತ ಸಂದರ್ಭದಲ್ಲಿ ಬಹಳಷ್ಟು ಮಾರಕವಾದ ಸಾಂಕ್ರಾಮಿಕ ರೋಗಗಳು ಹಬ್ಬುತ್ತಿದ್ದು, ಈ ಬಗ್ಗೆ ಪ್ರತಿಯೊಬ್ಬರೂ ಹೆಚ್ಚಿನ ಗಮನಹರಿಸಬೇಕಾದ ಅಗತ್ಯವನ್ನು ಪ್ರತಿಪಾದಿಸಿದರು.ಎಲ್ಲರ ಮನೆಯಲ್ಲೂ ಶೌಚಾಲಯ ನಿರ್ಮಿಸಲು ಸಲಹೆ ಮಾಡಿದ ಅವರು,ಆರೋಗ್ಯವಂತ ಸಮಾಜಕ್ಕೆ ಮಾಲಿನ್ಯ ರಹಿತ ಪರಿಸರ ನಿರ್ಮಾಣಕ್ಕೆ ಎಲ್ಲರೂ ಸಹಕರಿಸಬೇಕೆಂದರು.
ವಿಷಯದ ಬಗ್ಗೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗನ್ನಾಥ್ ಉಪನ್ಯಾಸ ನೀಡಿದರು.ಐವರ್ನಾಡು ಗ್ರಾಮಪಂಚಾಯಿತಿ ಉಪಾಧ್ಯಕ್ಷ ಶ್ರೀ ಕೃಷ್ಣಪ್ಪಗೌಡ ಅಧ್ಯಕ್ಷತೆ ವಹಿಸಿದ್ದರು.ಸಹಕಾರಿ ಬ್ಯಾಂಕಿನ ಅಧ್ಯಕ್ಷ ಚಂದ್ರ ಕೊಳ್ಚಾರ್, ವೈದ್ಯಾಧಿಕಾರಿ ಜಯಪ್ರಕಾಶ್, ತಾ. ಪಂ.ಸದಸ್ಯರಾದ ವೀಣಾ ಮೋಂಟಡ್ಕ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು. ವಾರ್ತಾಧಿಕಾರಿ ರೋಹಿಣಿ ಸ್ವಾಗತಿಸಿದರು.ಪಂಚಾಯಿತಿ ಕಾರ್ಯದರ್ಶಿ ನಾರಾಯಣಗೌಡ ವಂದಿಸಿದರು.