ಮಂಗಳೂರು,ಮಾರ್ಚ್ 15:ದಕ್ಷಿಣ ಕನ್ನಡ ಜಿಲ್ಲಾ 16ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಸೋಮವಾರ ಬೆಳಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮ್ಮೇಳನ ಸಮಿತಿಯ ಗೌರವಾಧ್ಯಕ್ಷ ಜೆ.ಕೃಷ್ಣ ಪಾಲೆಮಾರ್ ಅವರು ರಾಷ್ಟ್ರ ಧ್ವಜಾ ರೋಹಣ ಮಾಡುವ ಮೂಲಕ ಹಾಗೂ ಕನ್ನಡ ಧ್ವಜಾ ರೋಹಣವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ್ ಕುಮಾರ್ ಕಲ್ಕೂರ ಅವರು ಹಾಗೂ ಸಮ್ಮೇಳನ ಧ್ವಜಾರೋಹಣವನ್ನು ಮಂಗಳೂರು ಮಹಾನಗರಪಾಲಿಕೆ ಮೇಯರ್ ಶ್ರೀಮತಿ ರಜನಿ ದುಗ್ಗಣ್ಣ ಅವರು ನೆರವೇರಿಸಿದರು.
ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಚಿವ ಜೆ.ಕೃಷ್ಣ ಪಾಲೆಮಾರ್, ಮಂಗಳೂರಿನಲ್ಲಿ 25 ವರ್ಷಗಳ ಬಳಿಕ ನಡೆಯುತ್ತಿರುವ ಜಿಲ್ಲಾ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅದ್ದೂರಿಯಾಗಿ ಮತ್ತು ಫಲಪ್ರದವಾಗಿ ಜರುಗಿಸುವ ನಿಟ್ಟಿನಲ್ಲಿ ಸರ್ವ ಸಿದ್ದತೆಗಳಾಗಿದ್ದು, ಜಿಲ್ಲಾಡಳಿತ ಸಂಪೂರ್ಣವಾಗಿ ತೊಡಗಿಕೊಂಡಿದೆ ಎಂದರು. ಜಿಲ್ಲೆಯ ಜನತೆ ಸಕ್ರಿಯವಾಗಿ ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಳ್ಳಬೇಕೆಂದು ಅವರು ಮನವಿ ಮಾಡಿದರು.
ಶಾಸಕರಾದ ಎನ್. ಯೋಗೀಶ್ ಭಟ್, ಯು ಟಿ ಖಾದರ್, ಮನಾಪ ಆಯುಕ್ತ ಡಾ. ವಿಜಯಪ್ರಕಾಶ್, ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ ಅವರನ್ನೊಳಗೊಂಡಂತೆ ಅನೇಕ ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
ನಗರದ ಕೆನರಾ ಹೆಣ್ಮಕ್ಕಳ ಪ್ರೌಢಶಾಲೆ ವಿದ್ಯಾರ್ಥಿನಿಯರು ರಾಷ್ಟ್ರಗೀತೆ, ನಾಡಗೀತೆ ಹಾಗೂ ರೈತಗೀತೆಗಳನ್ನು ಹಾಡಿದರು. ಶ್ರೀಮತಿ ವಿಜಯಲಕ್ಷ್ಮಿ ಶೆಟ್ಟಿ ವಂದಿಸಿದರು.