Tuesday, April 27, 2010
ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಬೇಡಿ:ಜಿಲ್ಲಾಡಳಿತ ಎಚ್ಚರಿಕೆ
ಮಂಗಳೂರು,ಏ.27: ರಾಜ್ಯ ಚುನಾವಣಾ ಆಯೋಗ ಗ್ರಾಮಪಂಚಾಯಿತಿ ಸಾರ್ವತ್ರಿಕ ಚುನಾವಣೆ 2010ನ್ನು ನಡೆಸಲು ವೇಳಾಪಟ್ಟಿ ಪ್ರಕಟಿಸಿದ್ದು 15.4.10 ರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದೆ.ಆದರೆ ಪ್ರಸಕ್ತ ಸನ್ನಿವೇಶದಲ್ಲಿ ಕೆಲ ದಿನ ಪತ್ರಿಕೆಗಳು ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳನ್ನು ನಿರ್ದಿಷ್ಟ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳೆಂದು ಪ್ರಕಟಿಸಿರುವುದು ಜಿಲ್ಲಾಡಳಿತಕ್ದ ಗಮನಕ್ಕೆ ಬಂದಿದ್ದು ಇದು ನೀತಿ ಸಂಹಿತೆ ಸ್ಪಷ್ಟ ಉಲ್ಲಂಘನೆಯಾಗಿದೆ. ಕರ್ನಾಟಕ ಪಂಚಾಯತ್ ರಾಜ್ ಕಾಯಿದೆ 1993 ಕಲಂ 7(2)ರ ಅನ್ವಯ ಗ್ರಾಮಪಂಚಾಯಿತಿ ಚುನಾವಣೆಗಳು ಪಕ್ಷ ರಹಿತವಾಗಿ ನಡೆಯಲಿದೆ. ಹೀಗಾಗಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಕೆಲವು ಪಕ್ಷದ ಮುಖಂಡರು, ನಾಯಕರು ಕೆಲವು ಗ್ರಾಮ ಪಂಚಾಯತಿ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ ಅಭ್ಯರ್ಥಿಗಳೆಂದು ತಿಳಿಸುವ ಹೇಳಿಕೆಗಳನ್ನು ನೀಡುತ್ತಿರುವುದು ಕೂಡ ತಮ್ಮ ಗಮನಕ್ಕೆ ಬಂದಿದ್ದು, ಮಾಧ್ಯಮಗಳಾಗಲಿ, ಪಕ್ಷದ ಮುಖಂಡರುಗಳಾಗಲಿ ಇಂತಹ ಹೇಳಿಕೆಗಳನ್ನು ಪ್ರಕಟಿಸುವುದು ಅಥವಾ ನೀಡುವುದು ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.