ಮಂಗಳೂರು,ಮಾರ್ಚ್.08: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿರು ಬೇಸಿಗೆ ಆರಂಭವಾಗುತ್ತಿದ್ದಂತೆ ಉದ್ಭವಿಸುವ ಕುಡಿಯುವ ನೀರಿನ ಸಮಸ್ಯೆಯ ಪರಿಹಾರಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಆ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿ ಡಾ ಎನ್ ಎಸ್ ಚನ್ನಪ್ಪಗೌಡ ಅವರು ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲೆಯಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು ಅಧಿಕಾರಿಗಳು ಸ್ಪಂದಿಸಿ ಕೂಡಲೇ ಪರಿಹಾರ ನೀಡಬೇಕು. ಈ ಸಂಬಂಧ ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದ್ದು, ಅನುದಾನದ ಕೊರತೆ ಇಲ್ಲ; ಲಭ್ಯವಿರುವ ಅನುದಾನದಿಂದ ಬರ ಪರಿಹಾರ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಕೈಗೊಳ್ಳುವಂತೆ ಅವರು ಸೂಚಿಸಿದರು.
ಅನಿವಾರ್ಯ ಸಂದರ್ಭಗಳಲ್ಲಿ ಮಾತ್ರ ಹೊಸ ಕೊಳವೆ ಬಾವಿಗಳನ್ನು ಕೊರೆಯಲು ಕ್ರಮಕೈಗೊಳ್ಳಬಹುದಾಗಿದ್ದು, ಜಿಲ್ಲೆಯ ಮಹಾನಗರಪಾಲಿಕೆ, ತಾಲೂಕು ಪಂಚಾಯಿತಿ ವ್ಯಾಪ್ತಿಯ ಸ್ಥಳೀಯ ನಗರ ಸಂಸ್ಥೆಗಳಲ್ಲಿ ಅತಿ ತುರ್ತಾಗಿ ಉದ್ಭವಿಸಬಹುದಾದ ನೀರಿನ ಸಮಸ್ಯೆ ಇರುವ ಪ್ರದೇಶಗಳನ್ನು ಗುರುತಿಸಿ ಅದಕ್ಕೆ ಬೇಕಾದ ಖರ್ಚು ವೆಚ್ಚಗಳ ಕಾರ್ಯಯೋಜನೆಯನ್ನು ಸಿದ್ಧಪಡಿಸಿ ಸೋಮವಾರದೊಳಗೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಈಗಾಗಲೇ ಜಿಲ್ಲೆಯ ತಾಲೂಕು ಪಂಚಾ ಯಿತಿಗಳ ಕಂಟ್ರೋಲ್ ರೂಮ್ ಗಳಿಗೆ ಬಂದಿರುವ ಕುಡಿಯುವ ನೀರು ದೂರುಗಳನ್ನು ಪರಿಶೀಲಿಸಲಾಗಿ ಅತಿ ಹೆಚ್ಚು ದೂರುಗಳು ಬೆಳ್ತಂಗಡಿಯಿಂದ ದಾಖಲಿಸಲಾಗಿದೆ. ಬೆಳ್ತಂಗಡಿಯಿಂದ 172, ಪುತ್ತೂರು 10, ಉಳಿದಂತೆ ಬಂಟ್ವಾಳ 56, ಮಂಗಳೂರು 30 ಹಾಗೂ ಸುಳ್ಯದಲ್ಲಿ 27 ದೂರುಗಳು ದಾಖಲಾಗಿವೆ.
ಜಿಲ್ಲೆಯಲ್ಲಿ ಮುಂಬರುವ ಬೇಸಿಗೆಯಲ್ಲಿ ಯಾವುದೇ ರೀತಿಯ ಸಾಂಕ್ರಾಮಿಕ ರೋಗಗಳು ಬಾರದಂತೆ ಎಚ್ಚರ ವಹಿಸಲು ಓವರ್ ಹೆಡ್ ಟ್ಯಾಂಕ್ ಮತ್ತು ನೆಲಮಟ್ಟದ ಟ್ಯಾಂಕ್ ಗಳನ್ನು ಸ್ವಚ್ಛಗೊಳಿಸಲು ಸಂಬಂಧಪಟ್ಟವರಿಗೆ ನಿರ್ದೇಶನ ನೀಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಎಲ್ಲ ಸಂಬಂಧಪಟ್ಟ ಅಧಿಕಾರಿಗಳು ತಮ್ಮ ಮೊಬೈಲ್ ಫೋನ್ ಗಳನ್ನು 24ಗಂಟೆಯೂ ಚಾಲನೆಯಲ್ಲಿಟ್ಟಿರಲು ಹಾಗೂ ಸಾರ್ವಜನಿಕರ ಕರೆಗಳಿಗೆ ಕೂಡಲೇ ಸ್ಪಂದಿಸುವಂತೆ ತಾಕೀತು ಮಾಡಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಸಿಇಒ ಡಾ ಕೆ ಎನ್ ವಿಜಯಪ್ರಕಾಶ್ ಅವರು, ಕುಡಿಯುವ ನೀರು ಸಂಬಂಧ ಜಿಲ್ಲಾ ಪಂಚಾಯಿತಿ ಸಭೆಯಲ್ಲಾದ ಚರ್ಚೆಯ ಬಗ್ಗೆ ಸಭೆಯ ಗಮನಸೆಳೆದರು. ಮಹಾನಗರಪಾಲಿಕೆ ಆಯುಕ್ತರಾದ ಡಾ ಹರೀಶ್ ಕುಮಾರ್, ಅಪರ ಜಿಲ್ಲಾಧಿಕಾರಿ ದಯಾನಂದ, ಜಿಪಂ ಇಂಜಿನಿಯರ್ ವಿಭಾಗದ ಸತ್ಯ ನಾರಾಯಣ ಉಪಸ್ಥಿತರಿದ್ದರು.