ಮಂಗಳೂರು,ಜುಲೈ. 28: 2012 ನೇ ಆಗಸ್ಟ್ 15 ರಂದು ಸ್ವಾತಂತ್ರ್ಯ ಸಂಭ್ರಮ ದಿನಾಚರಣೆಯ ಸಂದರ್ಭದಲ್ಲಿ ಪ್ಲಾಸ್ಟಿಕ್ ಧ್ವಜವನ್ನು ತಯಾರಿಸಿ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆಯೆಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳಾದ ಡಾ.ಎನ್.ಎಸ್. ಚನ್ನಪ್ಪ ಗೌಡ ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಸಮಾರಂಭದ ಕುರಿತ ಜಿಲ್ಲಾ ಮಟ್ಟದ ಅಧಿಕಾರಿಗಳ ಪೂರ್ವಭಾವೀ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯ ವೇಳೆ ರಾಷ್ಟ್ರಧ್ವಜಕ್ಕೆ ನಾವು ನೀಡಬೇಕಾಗಿರುವ ಗೌರವದ ಬಗ್ಗೆ ಅರಿತುಕೊಳ್ಳಬೇಕು. ಪ್ಲಾಸ್ಟಿಕ್ ಧ್ವಜಗಳನ್ನು ಬೀದಿಗಳಲ್ಲಿ ಮಾರಾಟ ಮಾಡುವುದು ಸಲ್ಲದು. ಪ್ರತೀ ವರ್ಷದಂತೆ ಈ ವರ್ಷವೂ ಆಗಸ್ಟ್ 15 ರಂದು ಪೂರ್ವಾಹ್ನ 8.50 ಕ್ಕೆ ನೆಹರೂ ಮೈದಾನದಲ್ಲಿ ಸಮಾವೇಶಗೊಂಡು, ಅತಿಥಿಗಳ ಆಗಮನ, ಗೌರವ ಸ್ವೀಕಾರ, ಸ್ವಾತಂತ್ರ್ಯೋತ್ಸವ ಸಂದೇಶ, ವಿಶಿಷ್ಟ ಮಕ್ಕಳ ಪ್ರಶಸ್ತಿ ಪ್ರದಾನ ಮುಂತಾದ ಕಾರ್ಯಕ್ರಮಗಳನ್ನು ನೆರವೇರಿಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು. ಅಂದು ಅಪರಾಹ್ನ 3.00 ಗಂಟೆಯಿಂದ ಪುರಭವನದಲ್ಲಿ ಪೋಲೀಸ್ ಬ್ಯಾಂಡ್ ಮತ್ತು ಕವಿಗೋಷ್ಠಿ, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವುದೆಂದು ಸಭೆಯಲ್ಲಿ ನಿರ್ಧರಿಸಲಾಯಿತು.
ಈ ಸಂದರ್ಭದಲ್ಲಿ ಸಮಾರಂಭವನ್ನು ಅಚ್ಚುಕಟ್ಟಾಗಿ ನೆರವೇರಿಸಲು ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು. ಎಲ್ಲಾ ಸರಕಾರಿ ನೌಕರರು ತಮ್ಮತಮ್ಮ ಕಚೇರಿಯಲ್ಲಿ ರಾಷ್ಟ್ರ ಧ್ವಜಕ್ಕೆ ವಂದನೆ ಸಲ್ಲಿಸಿ ಮೈದಾನಕ್ಕೆ ಕಡ್ಡಾಯವಾಗಿ ಆಗಮಿಸಿ ಜಿಲ್ಲಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಸಭೆಯಲ್ಲಿ ಸೂಚಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್. ವಿಜಯಪ್ರಕಾಶ್, ಮಹಾನಗರಪಾಲಿಕೆ ಆಯುಕ್ತರಾದ ಡಾ. ಹರೀಶ್ ಕುಮಾರ್ ಮತ್ತು ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.