Tuesday, November 20, 2012

ಉದ್ಯೋಗ ಭರವಸೆ ಯೋಜನೆಯಡಿ ದೂರು ಕಂಡು ಬಂದಲ್ಲಿ ಕಾನೂನು ಕ್ರಮ :ನಳಿನ್ ಕುಮಾರ್ ಕಟೀಲ್

ಮಂಗಳೂರು, ನವೆಂಬರ್. 20 : ಯಾವುದೇ ಗ್ರಾಮ ಪಂಚಾಯತ್ ನಲ್ಲಿ ರಾಷ್ಟ್ರೀಯ ಉದ್ಯೋಗ ಭರವಸೆ ಯೋಜನೆಯಡಿ ಹಣ ದುರುಪಯೋಗ ಪ್ರಕರಣಗಳು ಕಂಡು ಬಂದಲ್ಲಿ ಕೂಡಲೇ ಕಾನೂನು ಕ್ರಮ ಕೈಗೊಳ್ಳಲು  ಮಂಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ದ.ಕ.ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್.ವಿಜಯಪ್ರಕಾಶ್ ಅವರಿಗೆ ಸೂಚಿಸಿದ್ದಾರೆ.
          ಅವರು ಇಂದು ದ.ಕ.ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕೇಂದ್ರ ನೆರವಿನ ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ ಬಗ್ಗೆ ಜಿಲ್ಲಾ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪುತ್ತೂರು ತಾಲೂಕಿನ ಬಹುತೇಕ ಗ್ರಾಮ ಪಂಚಾಯತ್ ಗಳಲ್ಲಿ ರಾಷ್ಟ್ರೀಯ ಉದ್ಯೋಗ ಭರವಸೆ ಯೋಜನೆಯಡಿ ಅಭಿವೃದ್ಧಿ ಕಾಮಗಾರಿಗಳು ಕೈಗೊಳ್ಳಲು ತೊಡಕುಂಟಾಗಿದೆಯೆಂದು ಸಭೆಯಲ್ಲಿ ಅಧಿಕಾರಿಗಳು ಸಂಸದರ ಅವಗಾಹನೆಗೆ ತಂದಾಗ 24-12-12 ರಂದು ಪುತ್ತೂರು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್ ಅಧ್ಯಕ್ಷರು,ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಸಭೆ ಏರ್ಪಡಿಸುವಂತೆ    ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು.
           ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ಜಿಲ್ಲೆಯಲ್ಲಿ ಆಗಿರುವ ಲೋಪದೋಷಗಳನ್ನು ಸರಿಪಡಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಿ ತನಿಖೆ ನಡೆಸುವಂತೆ ತಿಳಿಸಿದರು.
ನಕ್ಸಲ್ ಬಾಧಿತ ಬೆಳ್ತಂಗಡಿ ತಾಲೂಕಿನ 9 ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಕರ್ಾರ ರೂ.5 ಕೋಟಿ ಅನುದಾನ ನೀಡಿದ್ದು, ಈಗಾಗಲೇ ರೂ.2.26 ಕೋಟಿಗಳನ್ನು ವೆಚ್ಚ ಮಾಡಿ ಆರೋಗ್ಯ ಕೇಂದ್ರ, ಅಂಗನವಾಡಿ ಕೇಂದ್ರಗಳನ್ನು ತೆರೆಯಲಾಗಿದೆ ಹಾಗೂ ಸರ್ವ ಶಿಕ್ಷಣ ಅಭಿಯಾನ ಯೋಜನೆಯಡಿ ಶಿಕ್ಷಕರನ್ನು ನೇಮಕ ಮಾಡಲಾಗಿದೆಯೆಂದು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್.ವಿಜಯಪ್ರಕಾಶ್ ಸಭೆಗೆ ತಿಳಿಸಿದರು.
ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೆಲವು ಸರ್ಕಾರಿ ಶಾಲೆಗಳಿಗೆ ಆರ್ ಟಿಸಿ ಇಲ್ಲದಿರುವ ಬಗ್ಗೆ ದೂರುಗಳು ಕೇಳಿ ಬಂದಿದ್ದು, ಅಂತಹ ಶಾಲೆಗಳು ತಮ್ಮ ಇಲಾಖೆ ಮೂಲಕ ಆರ್ ಟಿ ಸಿಗೆ ಮನವಿ ಸಲ್ಲಿಸಿದಲ್ಲಿ ಆರ್ ಟಿಸಿಯನ್ನು ನೀಡಲು ಕ್ರಮ ವಹಿಸುವುದಾಗಿ ಅಪರ ಜಿಲ್ಲಾಧಿಕಾರಿ ದಯಾನಂದ್ ಅವರು ಸಭೆಯಲ್ಲಿ ತಿಳಿಸಿದರು. ಜಿಲ್ಲೆಯಲ್ಲಿರುವ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಆದ್ಯತೆ ಮೇಲೆ 2013 ರ ಮಾರ್ಚ್ ಅಂತ್ಯದೊಳಗೆ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸಂಸದರು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ,ಉಪಾಧ್ಯಕ್ಷರಾದ ರಿತೇಶ್ ಶೆಟ್ಟಿ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ  ಸದಸ್ಯರು ಮುಂತಾದವರು ಭಾಗವಹಿಸಿದ್ದರು.